ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಅವರು, ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹರಿಯುವ ಕೃಷ್ಣಾ ನದಿ ನೀರನ್ನು ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹರಿಸಲು ಸಹೋದರ ಭಾವನೆಯಿಂದ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಅವರು ಚಿಂತಾಮಣಿಯಲ್ಲಿ (ಚಿಕ್ಕಬಳ್ಳಾಪುರ) ಸೋಮವಾರ ಆಯೋಜಿಸಲಾಗಿದ್ದ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿ ಮತ್ತು ನ್ಯಾ. ವಿ. ಗೋಪಾಲಗೌಡ ಅವರು, ಕೃಷ್ಣಾ ನದಿ ನೀರು ಹರಿಸಲು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೊಂದಿಗೆ ಚರ್ಚಿಸಿ ಸಹಕಾರ ನೀಡಬೇಕು ಎಂದು ಪವನ್ ಕಲ್ಯಾಣ್ ಅವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಪವನ್ ಕಲ್ಯಾಣ್ ಅವರು, ಈ ನಿಟ್ಟಿನಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.



