ಬೆಂಗಳೂರಿನ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ವೇತನ ಸಹಿತ ಹೆರಿಗೆ ರಜೆ (Paid Maternity Leave) ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ.
ಸುವರ್ಣ ಕರ್ನಾಟಕ ಶುಶ್ರೂಷಾಧಿಕಾರಿಗಳ ಸಂಘವು ಆಯೋಗಕ್ಕೆ ಸಲ್ಲಿಸಿದ ಮನವಿಯ ಪ್ರಕಾರ, ಕಿದ್ವಾಯಿ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ನೌಕರರು ಹಾಗೂ ಶುಶ್ರೂಷಕರಿಗೆ ಹೆರಿಗೆ ಭತ್ಯೆಯನ್ನು ಸಹ ನೀಡುತ್ತಿಲ್ಲ. ಅಲ್ಲದೆ, ಹೆರಿಗೆ ರಜೆ ಮುಗಿಸಿಕೊಂಡು ಕರ್ತವ್ಯಕ್ಕೆ ಹಾಜರಾಗಲು ಬರುವ ಸಿಬ್ಬಂದಿಯನ್ನು ಕೆಲಸಕ್ಕೂ ನೇಮಿಸಿಕೊಳ್ಳುತ್ತಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಮಹಿಳಾ ನೌಕರರಿಗೆ ವೇತನಸಹಿತ ಹೆರಿಗೆ ರಜೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗೆ ನಿರ್ದೇಶನ ನೀಡುವಂತೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.



