ಬೆಂಗಳೂರು: ದೇಶದ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಸಂಜೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಹಿನ್ನೆಲೆಯಲ್ಲಿ, ಅವರು ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಜೂನ್ 16, 1931ರಲ್ಲಿ ದಾವಣಗೆರೆಯ ಶಾಮನೂರು ಗ್ರಾಮದಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದರು. ಹಲವು ಮುಖ್ಯಮಂತ್ರಿಗಳ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಶಾಮನೂರು ಅವರು ಅಖಿಲ ಭಾರತೀಯ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಮಹಾಸಭಾದಲ್ಲಿ ಅವರ ನೇತೃತ್ವದಲ್ಲಿ ಸಾಕಷ್ಟು ಕಾರ್ಯಕ್ರಮಗಳು ನಡೆದಿವೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗೌರವಾಧ್ಯಕ್ಷರು ಮತ್ತು ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಗಣ್ಯರಾಗಿ, ನಾಯಕರಾಗಿ ನಮಗೆಲ್ಲರಿಗೂ ಮಾರ್ಗದರ್ಶನ ನೀಡುತ್ತಿದ್ದ ನೇರ ನುಡಿಯ ಶಾಮನೂರು ಶಿವಶಂಕರಪ್ಪ ಅವರು ಈ ಹಿಂದೆ ವಸತಿ ಸಚಿವರಾಗಿ ಮತ್ತು ಕೊಡುಗೈ ದಾನಿಯಾಗಿ ಸಮಾಜಕ್ಕೆ ನೀಡಿರುವ ಕೊಡುಗೆ ಅಪಾರ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾದ ದಾವಣಗೆರೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ, ಸಾವಿರಾರು ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದ ಶಾಮನೂರು ಅವರು ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಮತ್ತು ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು, ಅವರ ನಿಧನದಿಂದ ಒಬ್ಬ ಶ್ರೇಷ್ಠ ಮುತ್ಸದ್ದಿಯನ್ನು ಹಾಗೂ ಮಾರ್ಗದರ್ಶಕರನ್ನು ನಾವು ಕಳೆದುಕೊಂಡಿದ್ದೇವೆ ಎಂದು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು ನಮ್ಮ ತಂದೆ ಭೀಮಣ್ಣ ಖಂಡ್ರೆ ಹಾಗೂ ತಮಗೆ ತುಂಬಾ ಆತ್ಮೀಯರಾಗಿದ್ದರು ಅವರ ನಿಧನದಿಂದ ಆಘಾತವಾಗಿದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಅತ್ಯಂತ ಹಿರಿಯ ಸದಸ್ಯರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಈ ನೋವಿನ ಸಂದರ್ಭದಲ್ಲಿ ಸಚಿವ ಸಂಪುಟದ ಸಹೋದ್ಯೋಗಿಯಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಅವರ ಕುಟುಂಬದ ಎಲ್ಲರಿಗೂ ಶಾಮನೂರು ಅಣ್ಣನವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


