ಶಿವಮೊಗ್ಗ: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆಯ ಮುಂಭಾಗದಲ್ಲಿ ಯುವಕನೋರ್ವನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕಾಶೀಪುರದ ನಿವಾಸಿ ಅರುಣ್ ಯಾನೆ ಬೋಂಡಾ (26) ಕೊಲೆಯಾದ ದುರ್ದೈವಿ.
ಅರುಣ್ ಶ್ರೀನಿಧಿ ವೈನ್ಸ್ ಮುಂದೆ ನಿಂತಿದ್ದ ಸಂದರ್ಭದಲ್ಲಿ ಏಕಾಏಕಿ ಬಂದ ಕಿಡಿಗೇಡಿಗಳು ಕಬ್ಬಿಣದ ರಾಡಿನಿಂದ ತಲೆಗೆ ಹಲ್ಲೆ ನಡೆಸಿದ್ದಾರೆ. ಕೇವಲ 30 ಸೆಕೆಂಡ್ಗಳ ಅಂತರದಲ್ಲಿ ಈ ಕೃತ್ಯ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ಅರುಣ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಘಟನೆ ನಡೆದ ತಕ್ಷಣ ಸ್ಥಳೀಯರು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರಾದರೂ, ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ. ಸದ್ಯ ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮೃತ ಅರುಣನ ಸಂಬಂಧಿಕರೇ ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ಶಂಕಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೌಟುಂಬಿಕ ಕಲಹವೇ ಈ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ.



