ಬೆಂಗಳೂರು: ಸಿಎಂ ಹುದ್ದೆಗಿಂತ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ಮುಖ್ಯ ನನಗೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಜೊತೆ ಪಕ್ಷವನ್ನು 2028 ಹಾಗೂ 2029 ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.
“ನಾನು ಪಕ್ಷದ ಅಧ್ಯಕ್ಷ, ಸತೀಶ್ ಜಾರಕಿಹೊಳಿ ಅವರು ಪಕ್ಷದ ಕಾರ್ಯಾಧ್ಯಕ್ಷರು. ಜೊತೆಗೆ ನಾವಿಬ್ಬರು ಆತ್ಮೀಯ ಸ್ನೇಹಿತರು. ಇಬ್ಬರ ಬಾಂಧವ್ಯ ಚೆನ್ನಾಗಿದೆ. ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿದ್ದೇವೆ. ನಾನು ಮತ್ತು ಸತೀಶ್ ಇಬ್ಬರೂ ಪ್ರಸ್ತುತ ಒಂದೇ ಸಂಪುಟದಲ್ಲಿ ಕೆಲಸ ಮಾಡುತ್ತಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಪಕ್ಷದ ದೊಡ್ಡ ಆಸ್ತಿ. ನಾವು ನಮ್ಮ ಕೆಲಸ ಮುಂದುವರೆಸಿಕೊಂಡು ಹೋಗುತ್ತೇವೆ” ಎಂದರು
“ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗಿದೆ. ಮಿಕ್ಕ ಸಮಯದಲ್ಲಿ ಏನೇನು ಕೆಲಸಗಳನ್ನು ಮಾಡಬೇಕು ಎಂದು ಚರ್ಚೆ ನಡೆಸಲಾಗಿದೆ. ಇದು ಬಿಟ್ಟರೆ ಮಾತುಕತೆಯಲ್ಲಿ ಬೇರೆ ವಿಶೇಷತೆ ಏನಿಲ್ಲ” ಎಂದರು.
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ, ಡಿಸಿಎಂ ಬಣವಿದೆ ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ, “ನನ್ನದು ಯಾವುದೇ ಬಣವಿಲ್ಲ. ಒಂದು ಬಣವಿದೆ, ಅದು ‘ಕಾಂಗ್ರೆಸ್ ಬಣ’. ನನ್ನ ಸಂಖ್ಯೆ 140. ಸಾಮೂಹಿಕ ನಾಯಕತ್ವದಲ್ಲಿ ಈ ಪಕ್ಷವನ್ನು ಕಟ್ಟಲಾಗಿದೆ. ಪಕ್ಷಕ್ಕೆ ನಾನೊಬ್ಬನೆ ದುಡಿದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ, ಸಿದ್ದರಾಮಯ್ಯ ಅವರು ಹಾಗೂ ಎಲ್ಲಾ ಶಾಸಕರ ಶ್ರಮದಿಂದ ರಾಜ್ಯದಲ್ಲಿ ಅಧಿಕಾರಕ್ಕೆ ತಂದಿದ್ದೇವೆ. ಇದನ್ನು ಉಳಿಸಿಕೊಂಡು ಹೋಗಬೇಕು ಎನ್ನುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿ ಹಾಗೂ ನಾನು ಭೇಟಿ ಮಾಡಿ ಚರ್ಚಿಸಿದ್ದೇವೆ” ಎಂದು ಹೇಳಿದರು.


