Flash News

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಬಾಗಲಕೋಟೆ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್‌.ವೈ ಮೇಟಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ.ಮೇಟಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ H​.Y.ಮೇಟಿ, ಜಿಲ್ಲೆಯ ತಿಮ್ಮಾಪುರದಲ್ಲಿ1946 ಅಕ್ಟೋಬರ್ 9ರಂದು ಜನಿಸಿದ್ದರು. ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಬಾಗಲಕೋಟೆ ಡಿಸಿಸಿ ಬ್ಯಾಂಕ್ ನಿರ್ದೇಶಕರೂ ಆಗಿದ್ದ H​.Y.ಮೇಟಿ, 1989ರಲ್ಲಿ ಗುಳೇದಗುಡ್ಡ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994ರಲ್ಲಿ ಗುಳೇದಗುಡ್ಡದಲ್ಲಿ ಜೆಡಿಎಸ್​ನಿಂದ 2ನೇ ಬಾರಿ ಗೆಲುವು ಸಾಧಿಸಿ ದೇವೇಗೌಡರ ಸಂಪುಟದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ 1996ರಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದು, 2004ರಲ್ಲಿ ಮತ್ತೆ ಗುಳೇದಗುಡ್ಡ ಕ್ಷೇತ್ರದಿಂದ ಹೆಚ್​.ವೈ.ಮೇಟಿ ಗೆದ್ದಿದ್ದರು.

2008ರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರಿದ್ದ ಇವರು 2008ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 2013ರಲ್ಲಿ ಬಾಗಲಕೋಟೆ ಕ್ಷೇತ್ರದಿಂದ ಗೆಲುವು ಸಾಧಿಸಿದ್ದ ಮೇಟಿ, ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಹೆಚ್​.ವೈ.ಮೇಟಿ, 2023ರಲ್ಲಿ ಬಾಗಲಕೋಟೆಯಲ್ಲಿ ಕಾಂಗ್ರೆಸ್​ನಿಂದ ಸ್ಫರ್ದಿಸಿ ಗೆಲುವಿನ ನಗೆ ಬೀರಿದ್ದರು.