Flash News

ಮಂಗಳೂರು | ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ: ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ, ಬಳಿಕ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಕಾಟಿಪಳ್ಳದಲ್ಲಿ ನಡೆದಿದೆ.

ಸ್ಥಳೀಯ ಸರ್ಕಾರಿ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ನಿನ್ನೆ ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದು, ಬಳಿಕ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ಪೊಲೀಸರ ಪ್ರಕಾರ, ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತ ಅಪ್ರಾಪ್ತ ಬಾಲಕಿಗೆ ಪ್ರೀತಿಯ ನಂಬಿಕೆ ಮೂಡಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ.

ಈ ವಿಚಾರವನ್ನು ಬಾಲಕಿ ಮನೀಶ್‌ಗೆ ತಿಳಿಸಿದಾಗ, ಆತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಬಾಲಕಿಯ ತಾಯಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಆರೋಪಿ ಮನೀಶ್ ಪೂಜಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳು ಹಾಗೂ ಪೊಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.