ವಿಟ್ಲ: ಕೇಪು ಗ್ರಾಮದಲ್ಲಿ ಅನುಮತಿ ರಹಿತ ನಡೆಯುತ್ತಿದ್ದ ಕೋಳಿ ಅಂಕದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿದ್ದು, ಅಕ್ರಮಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಒಟ್ಟು 17 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶನಿವಾರ (ಡಿ.20) ಮಧ್ಯಾಹ್ನ ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರಿಗೆ ಕಾನೂನುಬಾಹಿರ ಕೃತ್ಯದ ಕುರಿತು ಎಚ್ಚರಿಕೆ ನೀಡಲಾಗಿತ್ತು.
ಸ್ಥಳದಲ್ಲಿ ಹಾಜರಿದ್ದ ಪುತ್ತೂರು ಶಾಸಕ ಅಶೋಕ್ ರೈ ಅಲ್ಲಿ ಸೇರಿದ್ದ ಜನರಿಗೆ ಕೋಳಿ ಅಂಕವನ್ನು ಮುಂದುವರಿಸುವಂತೆ ಪ್ರಚೋದನೆ ಮತ್ತು ಪ್ರೇರಣೆ ನೀಡಿದ್ದಾರೆ ಎನ್ನಲಾಗಿದೆ. ಶಾಸಕರ ಪ್ರಚೋದನೆಯಿಂದ ಜನರು ಕಾನೂನು ಬಾಹಿರವಾಗಿ ಕೋಳಿ ಅಂಕ ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



