ಮಂಗಳೂರು: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಾಕಾರಿ ಕಾಮೆಂಟ್ ಮಾಡಿದ್ದ ಭಟ್ಕಳ ಮೂಲದ ವ್ಯಕ್ತಿಯನ್ನು ಮಂಗಳೂರು ನಗರದ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಜಾಲಿ ನಿವಾಸಿ ಶಂಕರ್ ಮಸ್ತಪ್ಪ ಮೊಗೇರ್ (35) ಎಂದು ಗುರುತಿಸಲಾಗಿದೆ.
ಮಾರ್ಚ್ 2ರಂದು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದಕ್ಕೆ ಕಾಮೆಂಟ್ ಮಾಡಿದ್ದ ಆರೋಪಿಯು, “Support madi bro ullal masjid hatra bomb blast madtini” (ಬೆಂಬಲ ನೀಡಿ ಬ್ರೋ, ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟ ಮಾಡುತ್ತೇನೆ) ಎಂದು ಬರೆದುಕೊಂಡಿದ್ದನು. ಈ ಕಾಮೆಂಟ್ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಧರ್ಮಗಳ ಮಧ್ಯೆ ವೈಷಮ್ಯ ಬಿತ್ತುವ, ಸಾರ್ವಜನಿಕ ಶಾಂತಿಗೆ ಭಂಗ ತರುವ ಮತ್ತು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಪರಿಗಣಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉಳ್ಳಾಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಮಂಗಳವಾರ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ ಕೃತ್ಯಕ್ಕೆ ಬಳಸಲಾದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ವಿರುದ್ಧ ಬಿ.ಎನ್.ಎಸ್ (BNS) 2023 ರ ಕಾಯ್ದೆಯಡಿ ಕಲಂ 196(2), 197(2), 299 ಹಾಗೂ 353(2) ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು, ಆತನನ್ನು ಮಂಗಳೂರಿನ 7ನೇ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


